ನವದೆಹಲಿ: ಶಿಕ್ಷಣ ಸಂಸ್ಥೆಗಳ ನಿಯಂತ್ರಣಕ್ಕೆ ಸಂಬಂಧಿಸಿದ ಅರ್ಜಿ ಕುರಿತು ಕೇಂದ್ರ ಶಿಕ್ಷಣ ಸಚಿವಾಲಯದ ಶಾಲಾ ಶಿಕ್ಷಣ ಇಲಾಖೆ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿಗೊಳಿಸಿದೆ.
14 ವರ್ಷದೊಳಗಿನ ಮಕ್ಕಳಿಗೆ ಶಿಕ್ಷಣ ಅಥವಾ ಧಾರ್ಮಿಕ ಬೋಧನೆ ನೀಡುವ ಎಲ್ಲ ಸಂಸ್ಥೆಗಳನ್ನು ನಿಯಂತ್ರಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಪರಿಗಣಿಸುವಂತೆ ಸುಪ್ರೀಂ ಕೋರ್ಟ್ ಈ ಹಿಂದೆ ಶಿಕ್ಷಣ ಸಚಿವಾಲಯಕ್ಕೆ ಸೂಚಿಸಿತ್ತು.
ಆದರೆ ಈ ಆದೇಶವನ್ನು ಸಚಿವಾಲಯ ಪಾಲಿಸಿಲ್ಲ ಎಂಬುದನ್ನು ಅರ್ಜಿದಾರರು ನ್ಯಾಯಾಲಯದ ಗಮನಕ್ಕೆ ತಂದರು.
ಆಗ, ನ್ಯಾಯಮೂರ್ತಿಗಳಾದ ದೀಪಂಕರ್ ದತ್ತಾ, ಶೀಲ್ ನಾಗೂ ಅವರಿದ್ದ ಪೀಠವು ಶಿಕ್ಷಣ ಸಚಿವಾಲಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್ ಅವರಿಗೆ ನೋಟಿಸ್ ಜಾರಿಗೊಳಿಸಿ, ನಾಲ್ಕು ವಾರಗಳೊಳಗೆ ಪ್ರತಿಕ್ರಿಯಿಸುವಂತೆ ನಿರ್ದೇಶಿಸಿತು.
'ತನ್ನ ಮನವಿ ಕುರಿತು ಕಾರ್ಯದರ್ಶಿಯವರು ಯಾವುದೇ ಕ್ರಮ ತೆಗೆದುಕೊಂಡಿಲ್ಲ' ಎಂದು ಆರೋಪಿಸಿ ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯನ್ನು ಪೀಠ ನಡೆಸಿತು.
ಇದಕ್ಕೂ ಮುನ್ನ, ಮನವಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಮೇ 11ರಂದು ಉಪಾಧ್ಯಾಯ ಅವರಿಗೆ ಸೂಚಿಸಿತ್ತು.

