ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಸೇರಿಕೊಂಡು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಭಾರತದ ಚುನಾವಣೆಗಳ 'ಮ್ಯಾಚ್ ಫಿಕ್ಸಿಂಗ್' ಉಸ್ತುವಾರಿಯನ್ನಾಗಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶನಿವಾರ(ಸೆ.26) ಆರೋಪಿಸಿದ್ದಾರೆ.
ಕೇರಳದ ಮಾಜಿ ಮುಖ್ಯ ಕಾರ್ಯದರ್ಶಿ ಅವರು ನಿವೃತ್ತಿಯ ನಂತರ ಬಿಜೆಪಿಯಿಂದ ಸ್ಪರ್ಧಿಸುವಂತೆ ಜ್ಞಾನೇಶ್ ಕುಮಾರ್ ಹೇಳಿದ್ದರು ಎನ್ನುವ ಮಾಧ್ಯಮಗಳ ವರದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಕೇರಳ ಕಾಂಗ್ರೆಸ್ ಪೋಸ್ಟ್ ಮಾಡಿದೆ.
ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಇದನ್ನು ಹಂಚಿಕೊಂಡಿರುವ ರಾಹುಲ್ ಗಾಂಧಿ, 'ಮೊದಲಿಗೆ, ಬಿಜೆಪಿಗೆ ಸದಸ್ಯರನ್ನು ಸೇರಿಸಿಕೊಳ್ಳಲು ಜ್ಞಾನೇಶ್ ಕುಮಾರ್ ಅವರನ್ನು ಬಳಸಿಕೊಳ್ಳಲಾಯಿತು. ನಂತರ ಮೋದಿ ಮತ್ತು ಶಾ ಸೇರಿಕೊಂಡು ಅವರನ್ನು ಭಾರತದ ಚುನಾವಣೆಯ ಅಂಪೇರ್ ಮತ್ತು ಮ್ಯಾಚ್ ಫಿಕ್ಸಿಂಗ್ ಉಸ್ತುವಾರಿಯನ್ನಾಗಿಸಿದರು' ಎಂದು ಆರೋಪಿಸಿದ್ದಾರೆ.
ಕೇರಳ ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ಅವರ ಆರೋಪಕ್ಕೆ ಜ್ಞಾನೇಶ್ ಕುಮಾರ್ ಅವರು ತಕ್ಷಣವೇ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಎಸ್‌ಐಆರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಇಬ್ಬರು ಚುನಾವಣಾ ಆಯುಕ್ತರು ಆಕ್ಷೇಪಣೆ ಎತ್ತಿದ್ದಾರೆ ಎಂದು ವರದಿಯಾದ ಬೆನ್ನಲ್ಲೇ, ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಜ್ಞಾನೇಶ್ ಕುಮಾರ್ ಅವರ ಬಂಧನ ಮತ್ತು ರಾಜೀನಾಮೆಗೆ ಆಗ್ರಹಿಸಿ ದೇಶದಾದ್ಯಂತ ಪ್ರತಿಭಟನೆ ನಡೆಸುತ್ತಿವೆ. ಈ ಆರೋಪಗಳನ್ನು ಚುನಾವಣಾ ಆಯೋಗವು ನಿರಾಕರಿಸಿದೆ.

