ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿಯ ವಿದ್ಯಾರ್ಥಿ ಪ್ರತಿಭಟನೆಗಳಲ್ಲಿ ಭಾಗವಹಿಸುವಂತೆ ಪ್ರಚಾರ ನಡೆಸಿದ ಆರೋಪದ ಮೇಲೆ ವಿದ್ಯಾರ್ಥಿಯೊಬ್ಬರಿಗೆ ನೋಟಿಸ್ ನೀಡಿದ್ದಕ್ಕೆ ಸುಪ್ರೀಂ ಕೋರ್ಟ್ ಕಿಡಿ ಕಾರಿದೆ.
'ನೋಟಿಸ್ ನೀಡಲು ನಿಮಗೆಷ್ಟು ಧೈರ್ಯ' ಎಂದು ಕೋರ್ಟ್ ಪ್ರಶ್ನಿಸಿದೆ.
ವಿದ್ಯಾರ್ಥಿ ಪ್ರತಿಭಟನೆಗಳಿಗೆ ಸಂಬಂಧಿಸಿದ ಎಫ್‌ಐಆರ್‌ಗಳನ್ನು ನಾವೇ ರದ್ದುಗೊಳಿಸಿದ್ದು, ಸಿಜೆಪಿ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ಯಾವುದೇ ವಿದ್ಯಾರ್ಥಿಯ ವಿರುದ್ಧ ಭವಿಷ್ಯದಲ್ಲಿ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಆದೇಶ ಇರುವಾಗ, ಈ ನೋಟಿಸ್ ಹೇಗೆ ಜಾರಿ ಮಾಡಿದ್ದಾರೆ ಎಂದು ನ್ಯಾಯಾಲಯ ಪ್ರಶ್ನಿಸಿತು.
ಗೌತಮ ಬುದ್ಧ ವಿಶ್ವವಿದ್ಯಾಲಯದ ದ್ವಿತೀಯ ವರ್ಷದ ವಿದ್ಯಾರ್ಥಿಗೆ ₹ 5 ಲಕ್ಷದ ವೈಯಕ್ತಿಕ ಬಾಂಡ್ ನೀಡುವಂತೆ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ನೋಟಿಸ್ ಜಾರಿ ಮಾಡಿದ್ದಾರೆ ಎಂದು ಹಿರಿಯ ವಕೀಲ ಬಿಶ್ವಜಿತ್ ಭಟ್ಟಾಚಾರ್ಯ ಅವರು ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠದ ಮುಂದೆ ಮೌಖಿಕವಾಗಿ ವಿಷಯವನ್ನು ಪ್ರಸ್ತಾಪಿಸಿದರು. ಅಲ್ಲದೆ ಮಾಧ್ಯಮಗಳಲ್ಲಿ ಬಂದ ಬಳಿಕ ಅದನ್ನು ಹಿಂಪಡೆಯಲಾಗಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು.
ಇದು ದೇಶದ ವಿದ್ಯಾರ್ಥಿಗಳ ಮೇಲೆ ನಡೆಸುತ್ತಿರುವ ದಬ್ಬಾಳಿಕೆ. ಇದು ಮೇಲ್ನೋಟಕ್ಕೆ ನ್ಯಾಯಾಂಗ ನಿಂದನೆಯಾಗಿದೆ. ನೋಯ್ಡಾ ಮತ್ತು ಉತ್ತರ ಪ್ರದೇಶದ ಅಧಿಕಾರಿಗಳು ವಿದ್ಯಾರ್ಥಿಗಳಲ್ಲಿ ಭಯದ ಮನೋಭಾವ ಸೃಷ್ಟಿಸಲು ಸಾಧ್ಯವಿಲ್ಲ ಎಂದು ವಕೀಲರು ಅರುಹಿದರು.
ಮ್ಯಾಜಿಸ್ಟ್ರೇಟ್‌ನ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ, 'ನೋಟಿಸ್ ಜಾರಿ ಮಾಡುವ ಧೈರ್ಯ ಮ್ಯಾಜಿಸ್ಟ್ರೇಟ್‌ಗೆ ಹೇಗೆ ಬಂತು? ಯಾವುದೇ ವಿದ್ಯಾರ್ಥಿಯ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ನಾವು ಸ್ಪಷ್ಟಪಡಿಸಿದ್ದೇವೆ. ನಮ್ಮ ಆದೇಶವನ್ನು ಯಾರೂ ಉಲ್ಲಂಘಿಸಕೂಡದು' ಎಂದು ತಾಕೀತು ಮಾಡಿತು.

