ಬದಿಯಡ್ಕ: ಬದಿಯಡ್ಕ ಗ್ರಾಮ ಪಂಚಾಯಿತಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ನೀರ್ಚಾಲು ಹಾಗೂ ಕುಂಟಿಕಾನ ವಾರ್ಡುಗಳ ನೇತೃತ್ವದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ಕುಂಟಿಕಾನ ಹಿರಿಯ ಬುನಾದಿ ಶಾಲೆಯಲ್ಲಿ ಜರಗಿತು. ಕಾಸರಗೋಡು ಬ್ಲಾಕ್ ಪಂಚಾಯಿತಿ ನೀರ್ಚಾಲು ಡಿವಿಶನ್ ಸದಸ್ಯ ಮಹೇಶ್ ವಳಕ್ಕುಂಜ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಭಾಗದ ಜನರಿಗೆ, ವಿಶೇಷವಾಗಿ ಶಾಲಾ ಮಕ್ಕಳು ಹಾಗೂ ಹಿರಿಯ ನಾಗರಿಕರಿಗೆ ಗುಣಮಟ್ಟದ ವೈದ್ಯಕೀಯ ಸೇವೆಗಳನ್ನು ತಲುಪಿಸುವಲ್ಲಿ ಇಂತಹ ಶಿಬಿರಗಳು ಮಹತ್ವದ ಪಾತ್ರ ವಹಿಸುತ್ತವೆ. ಕಣ್ಣಿನ ಆರೋಗ್ಯದ ಬಗ್ಗೆ ಪ್ರತಿಯೊಬ್ಬರೂ ಜಾಗರೂಕರಾಗಿರಬೇಕು ಹಾಗೂ ಸರ್ಕಾರದ ಉಚಿತ ಆರೋಗ್ಯ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.
ಕುಂಟಿಕಾನ ವಾರ್ಡು ಸದಸ್ಯೆ ಅನ್ನತ್ ಬೀವಿ ಅಧ್ಯಕ್ಷತೆ ವಹಿಸಿದ್ದರು. ಆರೋಗ್ಯ ಮತ್ತು ವಿದ್ಯಾಭ್ಯಾಸ ಸ್ಥಾಯಿಸಮಿತಿ ಅಧ್ಯಕ್ಷ ಅವಿನಾಶ್ ರೈ, ಕುಂಟಿಕಾನ ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಬ್ಬಾಸ್, ಶಾಲಾ ಮುಖ್ಯೋಪಾಧ್ಯಾಯ ರಾಧಾಕೃಷ್ಣನ್, ಆರೋಗ್ಯ ಇಲಾಖೆಯ ವೈದ್ಯರು ಶುಭಾಶಂಸನೆಗೈದರು. ನೀರ್ಚಾಲು ವಾರ್ಡು ಸದಸ್ಯ ಶ್ಯಾಮಪ್ರಸಾದ ಸರಳಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಆಶಾ ಕಾರ್ಯಕರ್ತೆ ಲಲಿತಾ ದೇವರಮೆಟ್ಟು ವಂದಿಸಿದರು. ಶಿಬಿರದಲ್ಲಿ ಆಗಮಿಸಿದ ನೂರಾರು ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳಿಗೆ ಉಚಿತ ಕಣ್ಣಿನ ತಪಾಸಣೆ ನಡೆಸಲಾಯಿತು. ಅಗತ್ಯವಿದ್ದವರಿಗೆ ಉಚಿತವಾಗಿ ಔಷಧ ವಿತರಿಸಲಾಯಿತು ಹಾಗೂ ಹೆಚ್ಚಿನ ಚಿಕಿತ್ಸೆ ಮತ್ತು ಪೆÇರೆ ಶಸ್ತ್ರಚಿಕಿತ್ಸೆಗೆ ಅಗತ್ಯವಿರುವವರನ್ನು ಗುರುತಿಸಲಾಯಿತು. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಕೀಯ ತಂಡದವರು ಕಣ್ಣಿನ ಆರೈಕೆ, ದೃಷ್ಟಿ ದೋಷ ತಡೆಗಟ್ಟುವುದು ಮತ್ತು ಪೌಷ್ಟಿಕ ಆಹಾರದ ಸೇವನೆ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿದರು. ಶಿಕ್ಷಕ ವೃಂದ, ಆರೋಗ್ಯ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

.jpg)
.jpg)
