ನವದೆಹಲಿ: ಎಸ್‌ಐಆರ್ ಅಕ್ರಮ ಕುರಿತಂತೆ ಕೇಂದ್ರ ಸರ್ಕಾರದ ವಿರುದ್ಧ ಒಗ್ಗಟ್ಟಿನ ಹೋರಾಟ ನಡೆಸುವ ನಿಟ್ಟಿನಲ್ಲಿ ರೂಪುರೇಷೆ ರೂಪಿಸಲು ಬುಧವಾರ ಇಂಡಿಯಾ ಬಣದ ಉನ್ನತ ನಾಕರು ಸಭೆ ನಡೆಸಿದರು.
ಮತಗಳ್ಳತನ ಸೇರಿ ಮೋದಿ ಸರ್ಕಾರದ ನಿರಂತರ ದಾಳಿಯಿಂದ ಸಂವಿಧಾನದ ರಕ್ಷಣೆಗೆ ವಿಪಕ್ಷಗಳು ಒಗ್ಗಟ್ಟಾಗಿವೆ ಎಂದು ಕಾಂಗ್ರೆಸ್ ಹೇಳಿದೆ.
ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಹಿರಿಯ ನಾಯಕಿ ಸೋನಿಯಾ ಗಾಂಧಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಜೈರಾಮ್ ರಮೇಶ್ ಮತ್ತು ಕೆ.ಸಿ. ವೇಣುಗೋಪಾಲ್, ಟಿಎಂಸಿಯ ಮಮತಾ ಬ್ಯಾನರ್ಜಿ, ಎಸ್‌ಪಿ), ಸಿಪಿಐ, ಸಿಪಿಐ(ಎಂ), ಎನ್‌ಸಿಪಿ(ಎಸ್‌ಪಿ) ಮತ್ತು ಶಿವಸೇನಾ(ಯುಬಿಟಿ) ಮುಂತಾದ ಪಕ್ಷಗಳ ನಾಯಕರು ಉಪಸ್ಥಿತರಿದ್ದರು.
'ಇಂಡಿಯಾ' ಮೈತ್ರಿಕೂಟದ ಸಭೆ ಆರಂಭಗೊಂಡಿದೆ. ಕಾಂಗ್ರೆಸ್, ಸಮಾಜವಾದಿ ಪಕ್ಷ, ಆಲ್ ಇಂಡಿಯಾ ತೃಣಮೂಲ ಕಾಂಗ್ರೆಸ್, ಎನ್‌ಸಿಪಿ(ಎಸ್‌ಪಿ), ಶಿವಸೇನಾ(ಯುಬಿಟಿ), ರಾಷ್ಟ್ರೀಯ ಜನತಾ ದಳ, ಸಿಪಿಐ(ಎಂ), ಸಿಪಿಐ, ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್, ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ, ಜಾರ್ಖಂಡ್ ಮುಕ್ತಿ ಮೋರ್ಚಾ, ಸಿಪಿಐಎಂಎಲ್, ಐಯುಎಂಎಲ್, ಕೇರಳ ಕಾಂಗ್ರೆಸ್ (ಎಂ), ಮರುಮಲಾರ್ಚಿ ದ್ರಾವಿಡ ಮುನ್ನೇತ್ರ ಕಳಗಂ, ವಿದುತಲೈ ಚಿರುತೈಗಳ್ ಕಚ್ಚಿ, ರೆವಲ್ಯೂಷನರಿ ಸೋಷಿಯಲಿಸ್ಟ್ ಪಾರ್ಟಿ, ಕೇರಳ ಕಾಂಗ್ರೆಸ್ (ಜೇಕಬ್) ಮತ್ತು ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್ ಪಕ್ಷಗಳ ನಾಯಕರು ಭಾಗವಹಿಸಿದ್ದಾರೆ' ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ತಿಳಿಸಿದ್ದಾರೆ.
ಪದೇ ಪದೇ ನಡೆಯುತ್ತಿರುವ ದಾಳಿಯಿಂದ ಸಂವಿಧಾನದ ರಕ್ಷಣೆಗೆ ಇವು ಸೇರಿದಂತೆ ಎಲ್ಲ ವಿರೋಧ ಪಕ್ಷಗಳು ಬದ್ಧವಾಗಿವೆ ಎಂದಿದ್ಧಾರೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವ ಪ್ರಸ್ತಾವನೆಯನ್ನು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮಂಡಿಸಲು ಅಗತ್ಯವಿರುವ ಕರಡು ಸೂಚನೆಯು ಸಿದ್ಧವಾಗಿದ್ದು, ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
ಡಿಎಂಕೆ ಮತ್ತು ಎಎಪಿ ಪಕ್ಷಗಳು ಈ ಸಭೆಯಿಂದ ದೂರ ಉಳಿದಿವೆ. ಉತ್ತರ ಪ್ರದೇಶದಲ್ಲಿ ರಾಜ್ಯಸಭಾ ಚುನಾವಣೆಯ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯ ಕಾರಣದಿಂದಾಗಿ ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಕೂಡ ಸಭೆಗೆ ಹಾಜರಾಗಿರಲಿಲ್ಲ.
ದೇಶದಲ್ಲಿ ಪ್ರಜಾಪ್ರಭುತ್ವ ರಕ್ಷಿಸಲು ಎಲ್ಲ ಪಕ್ಷಗಳ ಸಹಕಾರದೊಂದಿಗೆ ಬೃಹತ್ ಹೋರಾಟ ನಡೆಸಲು ಕಾಂಗ್ರೆಸ್ ಬಯಸಿದೆ ಎಂದು ಕೆ.ಸಿ. ವೇಣುಗೋಪಾಲ್ ಹೇಳಿದ್ದಾರೆ.
ಮುಖ್ಯ ಚುನಾವಣಾ ಆಯುಕ್ತರು, ಎಸ್‌ಐಆರ್‌ಗೆ ಸಂಬಂಧಿಸಿದ ನಿರ್ಣಯಗಳನ್ನು ಏಕಪಕ್ಷೀಯವಾಗಿ ಕೈಗೊಂಡಿದ್ದಾರೆ ಎಂದು ಇಬ್ಬರು ಚುನಾವಣಾ ಆಯುಕ್ತರು ಆಕ್ಷೇಪ ವ್ಯಕ್ತಪಡಿಸಿದ್ದ ಬಗ್ಗೆ ದಿ ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿ ವರದಿ ಪ್ರಕಟವಾಗಿತ್ತು. ಆ ಬಳಿಕ, ಸರ್ಕಾರದ ವಿರುದ್ಧ ವಿಪಕ್ಷಗಳು ಮುಗಿಬಿದ್ದಿವೆ.

