ನವದೆಹಲಿ: ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರ ನೇಮಕಕ್ಕೆ ಸಂಬಂಧಿಸಿದ 2023ರ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸುವ ಅರ್ಜಿಗಳನ್ನು ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠಕ್ಕೆ ವರ್ಗಾಯಿಸಬೇಕೇ? ಎಂಬ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಬುಧವಾರ ಭಿನ್ನ ತೀರ್ಪು ನೀಡಿದೆ.
ನ್ಯಾಯಮೂರ್ತಿಗಳಾದ ದೀಪಂಕರ್ ದತ್ತ ಮತ್ತು ಸತೀಶ್ ಚಂದ್ರ ಶರ್ಮಾ ಅವರಿದ್ದ ದ್ವಿಸದಸ್ಯ ಪೀಠದಲ್ಲಿ ಒಮ್ಮತ ಮೂಡಲಿಲ್ಲ. ನ್ಯಾಯಮೂರ್ತಿ ದತ್ತ ಅವರು ಅರ್ಜಿಗಳನ್ನು ಸಂವಿಧಾನ ಪೀಠಕ್ಕೆ ವರ್ಗಾಯಿಸುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟರೆ, ನ್ಯಾಯಮೂರ್ತಿ ಶರ್ಮಾ ಇದಕ್ಕೆ ಭಿನ್ನವಾಗಿ, ಪ್ರಕರಣವನ್ನು ಸಂವಿಧಾನ ಪೀಠ ಪರಿಗಣಿಸುವ ಅಗತ್ಯವಿದೆ ಎಂದು ಹೇಳಿದರು.
ಈ ವಿಷಯವನ್ನು ಈಗ ಭಾರತದ ಮುಖ್ಯ ನ್ಯಾಯಮೂರ್ತಿಗಳ ಮುಂದೆ ಇಡಲಾಗುವುದು. ಅವರು ಈ ಸಮಸ್ಯೆಯನ್ನು ಬಗೆಹರಿಸಲು ಸಂವಿಧಾನ ಪೀಠವನ್ನು ರಚಿಸುವ ಕುರಿತು ನಿರ್ಧರಿಸಲಿದ್ದಾರೆ ಎಂದು ಪೀಠ ತಿಳಿಸಿದೆ.
ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ ನೇಮಕ, ಸೇವಾ ಷರತ್ತು ಹಾಗೂ ಅಧಿಕಾರಾವಧಿಗೆ ಸಂಬಂಧಿಸಿದ 2023ರ ಕಾಯ್ದೆಯಡಿ ಆಯ್ಕೆ ಸಮಿತಿಯಲ್ಲಿ ಪ್ರಧಾನಿ, ಓರ್ವ ಕೇಂದ್ರ ಸಚಿವ ಮತ್ತು ಲೋಕಸಭೆಯ ಪ್ರತಿಪಕ್ಷ ನಾಯಕ ಇರಲಿದ್ದಾರೆ. ಈ ಸಮಿತಿಯಿಂದ ಮುಖ್ಯ ನ್ಯಾಯಮೂರ್ತಿಗಳನ್ನು ಹೊರಗಿಡಲಾಗಿದೆ.
2023ರ ಕಾಯ್ದೆಯನ್ನು ಪ್ರಶ್ನಿಸಿ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್), ಜಯಾ ಠಾಕೂರ್, ಸಂಜಯ್ ನಾರಾಯಣರಾವ್ ಮೆಶ್ರಾಮ್, ಧರ್ಮೇಂದ್ರ ಸಿಂಗ್ ಕುಶ್ವಾಹ ಹಾಗೂ ವಕೀಲ ಗೋಪಾಲ್ ಸಿಂಗ್ ಸೇರಿದಂತೆ ಹಲವರು ಅರ್ಜಿ ಸಲ್ಲಿಸಿದ್ದಾರೆ.

