ನವದೆಹಲಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾ ಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಎಂಬವರು ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅರವಿಂದ ಕುಮಾರ್ ಹಾಗೂ ವಿಪುಲ್ ಎಂ. ಪಂಚೋಲಿ ಅವರ ಪೀಠವು, 'ಈ ಅರ್ಜಿಯಲ್ಲಿ ಯಾವುದೇ ಹುರುಳಿಲ್ಲ' ಎಂಬ ಕಾರಣ ನೀಡಿ ವಜಾಗೊಳಿಸಿದೆ.
ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಅನೇಕ ಆರೋಪಗಳನ್ನು ಹೊರಿಸಿ ಬೆಳ್ತಂಗಡಿಯ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಈ ದೂರು ಅರ್ಜಿ ಯನ್ನು ನ್ಯಾಯಾಲಯ ತಿರಸ್ಕರಿಸಿತ್ತು. ಆ ಬಳಿಕ, ರಂಜನ್ ರಾವ್ ಮಂಗಳೂರು ಜಿಲ್ಲಾ ನ್ಯಾಯಾಲಯ ದಲ್ಲಿ ದಾವೆ ಹೂಡಿದ್ದರು. ಅರ್ಜಿ ಯನ್ನು ನ್ಯಾಯಾಲಯ ಪುರಸ್ಕರಿಸಿತ್ತು.
ಈ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಮಾಭಿವೃದ್ಧಿ ಯೋಜನೆಯು ಹೈಕೋರ್ಟ್ ಮೆಟ್ಟಿಲೇರಿತ್ತು. ಕೆಳ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ರಂಜನ್ ರಾವ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.

