ಫಗ್ವಾರಾ: ವಿದ್ಯಾರ್ಥಿನಿ ಮೇಲೆ ಹೊರಗಿನ ವ್ಯಕ್ತಿಯೊಬ್ಬರು ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಪಂಜಾಬ್ನ ಲವ್ಲಿ ಪ್ರೊಫೆಷನಲ್ ವಿಶ್ವವಿದ್ಯಾಲಯದ (ಎಲ್ಪಿಯು) ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.
ರೊಚ್ಚಿಗೆದ್ದ ವಿದ್ಯಾರ್ಥಿಗಳು ಕ್ಯಾಂಪಸ್ನ ಆಸ್ತಿಪಾಸ್ತಿ ಧ್ವಂಸಗೊಳಿಸಿ, ರಾಷ್ಟ್ರೀಯ ಹೆದ್ದಾರಿ ತಡೆದಿದ್ದಾರೆ.
ಭಾನುವಾರ ಸಂಜೆ ಪ್ರತಿಭಟನಾನಿರತ ವಿದ್ಯಾರ್ಥಿಗಳು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಘಟನೆಯಲ್ಲಿ ಹಲವು ಪೊಲೀಸರು ಗಾಯಗೊಂಡಿದ್ದಾರೆ. ಈ ವೇಳೆ ಹಿಂಸಾಚಾರ ಭುಗಿಲೆದ್ದಿದ್ದು, ಪೊಲೀಸರ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.
ಎಡಿಜಿಪಿ ಎಂ.ಎಫ್. ಫಾರೂಕಿ ನೇತೃತ್ವದ ಬೃಹತ್ ಪೊಲೀಸ್ ಪಡೆ ಕ್ಯಾಂಪಸ್ಗೆ ಧಾವಿಸಿದ್ದು, ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ವಿ.ವಿಯು ಸೋಮವಾರದಿಂದ 10 ದಿನಗಳ ಕಾಲ ತರಗತಿಗಳನ್ನು ರದ್ದುಪಡಿಸಿದ್ದು, ಮಧ್ಯಂತರ ಪರೀಕ್ಷೆಗಳನ್ನು ಮುಂದೂಡಿದೆ.
ಎಸ್ಐಟಿ ತನಿಖೆ:
ವಿದ್ಯಾರ್ಥಿಗಳ ದೂರಿನ ಮೇರೆಗೆ ಅಪರಿಚಿತ ವ್ಯಕ್ತಿಯ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ರಚಿಸಿದ್ದಾರೆ. ಆದರೆ, ಕ್ಯಾಂಪಸ್ನಲ್ಲಿ ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿರುವ ವಿಶ್ವವಿದ್ಯಾಲಯದ ಆಡಳಿತ ಮಂಡಳಿ, ಇವೆಲ್ಲವೂ ಕೇವಲ 'ವದಂತಿ' ಎಂದು ತಳ್ಳಿಹಾಕಿದೆ.
ಹೆದ್ದಾರಿ ತಡೆ, ಲಾಠಿ ಪ್ರಹಾರ:
ಭಾನುವಾರ ಬೆಳಿಗ್ಗೆ 8 ಗಂಟೆಯಿಂದಲೇ ದೆಹಲಿ-ಅಮೃತಸರ ರಾಷ್ಟ್ರೀಯ ಹೆದ್ದಾರಿ-44 ಅನ್ನು ವಿದ್ಯಾರ್ಥಿಗಳು ತಡೆ ಹಿಡಿದಿದ್ದರು. ಪ್ರತಿಭಟನಕಾರರನ್ನು ಚದುರಿಸಲು ಯತ್ನಿಸಿದ ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಈ ವೇಳೆ ರೊಚ್ಚಿಗೆದ್ದ ವಿದ್ಯಾರ್ಥಿಗಳು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಘಟನೆಯ ಹಿನ್ನೆಲೆ:
ಮಹಿಳಾ ಹಾಸ್ಟೆಲ್-3ರಲ್ಲಿದ್ದ ವಿದ್ಯಾರ್ಥಿನಿಯೊಬ್ಬಳ ಮೇಲೆ ಮೂರು ದಿನಗಳ ಹಿಂದೆ ಪ್ಲಂಬರ್ ಒಬ್ಬ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ಶನಿವಾರ ಮಧ್ಯರಾತ್ರಿಯಿಂದಲೇ ವಿದ್ಯಾರ್ಥಿಗಳು ಪ್ರತಿಭಟನೆ ಆರಂಭಿಸಿದ್ದರು. ಈ ಕುರಿತು ಹಾಸ್ಟೆಲ್ ವಾರ್ಡನ್ಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.
ಆದರೆ, ಈ ಆರೋಪಗಳನ್ನು ಎಲ್ಪಿಯು ಆಡಳಿತ ಮಂಡಳಿ ನಿರಾಕರಿಸಿದೆ. ವಿವಿಯ ಘನತೆಗೆ ಕಳಂಕ ತರಲು ಇಂತಹ ಸುಳ್ಳು, ಆಧಾರರಹಿತ ವದಂತಿಗಳನ್ನು ಹರಡುತ್ತಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಕಾಂಗ್ರೆಸ್ ವಾಗ್ದಾಳಿ:
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಸರ್ಕಾರದ ವಿರುದ್ಧ ಕಾಂಗ್ರೆಸ್ ಆರೋಪಿಸಿದೆ.

