ನವದೆಹಲಿ: ಮತದಾರರ ಹಕ್ಕುಗಳ ರಕ್ಷಣೆಗಾಗಿ 'ಇಂಡಿಯಾ' ಮೈತ್ರಿಕೂಟದಿಂದ ಸೋಮವಾರ (ಅ.12) ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮಾಹಿತಿ ನೀಡಿದ್ದಾರೆ.
ಕೇರಳಂನ ಆಲಪ್ಪುಳದಲ್ಲಿ ಈ ಕುರಿತು ಮಾತನಾಡಿದ ಅವರು, ಎಸ್ಐಆರ್ ವಿಚಾರವಾಗಿ ಮೈತ್ರಿಕೂಟದ ನಾಯಕರು ಈಗಾಗಲೇ ರಾಷ್ಟ್ರಪತಿಗಳನ್ನು ಭೇಟಿಯಾಗಿ ಕಳವಳ ವ್ಯಕ್ತಪಡಿಸಿದ್ದು, ಸೋಮವಾರ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಅವರನ್ನೂ ಭೇಟಿಯಾಗಲಿದ್ದೇವೆ ಎಂದು ಹೇಳಿದ್ದಾರೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ರಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ನಡೆಸುತ್ತಿರುವ ಪ್ರಯತ್ನಗಳೇ ಅವರ ಪತನಕ್ಕೆ ನಾಂದಿಯಾಗುತ್ತದೆ ಎಂದು ವೇಣುಗೋಪಾಲ್ ಆರೋಪಿಸಿದ್ದಾರೆ.
'ಪ್ರಧಾನಿ ಮೋದಿ ಅವರು ತಮ್ಮ ಪತನದ ಅಂಚಿನಲ್ಲಿರುವ ನಾಯಕನಂತೆ ವರ್ತಿಸುತ್ತಿದ್ದಾರೆ. ವಿರೋಧ ಪಕ್ಷಗಳ ಪ್ರತಿಭಟನೆಗಳಿಂದ ಅವರು ಭಯಭೀತಗೊಂಡಿದ್ದಾರೆ' ಎಂದು ವಾಗ್ದಾಳಿ ನಡೆಸಿದ್ದಾರೆ.
ಚುನಾವಣಾ ಪ್ರಕ್ರಿಯೆ ಮತ್ತು ವ್ಯವಸ್ಥೆಯು ಮುಕ್ತ ಹಾಗೂ ನ್ಯಾಯಸಮ್ಮತವಾಗುವವರೆಗೆ ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ಹೋರಾಟ ಮುಂದುವರಿಯಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ 'ಇಂಡಿಯಾ' ಮೈತ್ರಿಕೂಟದ ಪಕ್ಷಗಳ ಸಂಸದರು ರಾಷ್ಟ್ರ ರಾಜಧಾನಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ್ದರು.ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

