ನವದೆಹಲಿ: ದೇಶದ ಜನತೆಯ ಮತದಾನದ ಹಕ್ಕುಗಳನ್ನು ರಕ್ಷಿಸಲು ಇಂಡಿಯಾ ಮೈತ್ರಿಕೂಟವು ನಡೆಸುತ್ತಿರುವ ಚಳವಳಿಯ ಭಾಗವಾಗಿ ಸೋಮವಾರ ದಿಲ್ಲಿಯಲ್ಲಿ ಬೃಹತ್ ಪ್ರತಿಭಟನೆಯನ್ನು ಆಯೋಜಿಸಲಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಶನಿವಾರ ತಿಳಿಸಿದ್ದಾರೆ.
ತಮ್ಮ ಲೋಕಸಭಾ ಕ್ಷೇತ್ರವಾದ ಅಲಪ್ಪುಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಚುನಾವಣಾ ಪ್ರಕ್ರಿಯೆಯು ಮುಕ್ತ ಹಾಗೂ ನ್ಯಾಯಸಮ್ಮತವಾಗುವವರೆಗೆ ಕಾಂಗ್ರೆಸ್ ಹಾಗೂ ಇಂಡಿಯಾ ಮೈತ್ರಿಕೂಟವು ಹೋರಾಟವನ್ನು ಮುಂದುವರಿಸಲಿದೆ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಖ್ಯ ಚುನಾವಣಾಧಿಕಾರಿಯನ್ನು ರಕ್ಷಿಸಲು ಯತ್ನಿಸುತ್ತಿದ್ದು, ಅಂತಿಮವಾಗಿ ಇದು ಅವರ ಪತನಕ್ಕೆ ಕಾರಣವಾಗಲಿದೆ ಎಂದು ವೇಣುಗೋಪಾಲ್ ತಿಳಿಸಿದರು.
ಪ್ರಧಾನಿ ಮೋದಿಯವರು ಪತನದೆಡೆಗೆ ಸಾಗುತ್ತಿರುವ ನಾಯಕನಂತೆ ವರ್ತಿಸುತ್ತಿದ್ದಾರೆ. ವಿಪಕ್ಷಗಳ ಪ್ರತಿಭಟನೆಗೆ ಅವರು ಬೆದರಿದ್ದಾರೆ ಎಂದರು.



