ನವದೆಹಲಿ: ದಿಲ್ಲಿಯ ಕನ್ನಾಟ್ ಪ್ಲೇಸ್ ನ ಸೆಂಟ್ರಲ್ ಪಾರ್ಕ್ ನಲ್ಲಿ ಅಕ್ಟೋಬರ್ 16ರಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ಮತ್ತು ಅದರ ಸಂಸ್ಥಾಪಕ ಅಭಿಜೀತ್ ದೀಪ್ಕೆ ನಡೆಸಲು ಉದ್ದೇಶಿಸಿರುವ ಪ್ರತಿಭಟನೆಗೆ ತಡೆ ನೀಡಲು ದಿಲ್ಲಿ ಹೈಕೋರ್ಟ್ ಗುರುವಾರ ನಿರಾಕರಿಸಿದೆ.
ಪ್ರತಿಭಟನೆಯನ್ನು ನಿಯಂತ್ರಿಸಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ನೀಡಿದ ಭರವಸೆಯನ್ನು ನ್ಯಾಯಾಲಯ ದಾಖಲಿಸಿಕೊಂಡಿದೆ.
ಸುಪ್ರೀಂ ಕೋರ್ಟ್ ರೂಪಿಸಿರುವ ಕಾನೂನು ಚೌಕಟ್ಟಿನ ಅನ್ವಯ ಪ್ರತಿಭಟನೆಯನ್ನು ನಿಯಂತ್ರಿಸಲು ಪೊಲೀಸರಿಗೆ ನಿರ್ದೇಶನ ನೀಡುವಂತೆ ಕೋರಿ ಕನ್ನಾಟ್ ಪ್ಲೇಸ್ ನ ವ್ಯಾಪಾರಿಯೊಬ್ಬರು ಅರ್ಜಿ ಸಲ್ಲಿಸಿದ್ದರು. ಹಂಗಾಮಿ ಮುಖ್ಯ ನ್ಯಾಯಮೂರ್ತಿ ನಿತಿನ್ ವಾಸುದೇವ ಸಾಂಬ್ರೆ ಮತ್ತು ನ್ಯಾಯಮೂರ್ತಿ ಸಂಜಯ್ ಶರ್ಮಾ ಅವರಿದ್ದ ಪೀಠ ಅರ್ಜಿಯ ವಿಚಾರಣೆ ನಡೆಸಿತು.
ಹಬ್ಬದ ಋತುವಿನಲ್ಲಿ ದಿಲ್ಲಿಯ ಹೃದಯಭಾಗದಲ್ಲಿ ಪ್ರತಿಭಟನೆ ನಡೆದರೆ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಬೇಕಾದ ಪರಿಸ್ಥಿತಿ ಎದುರಾಗಬಹುದು. ಇದರಿಂದ ವ್ಯಾಪಾರಿಗಳು ಮತ್ತು ಮಾರಾಟಗಾರರು ಬೀದಿಪಾಲಾಗುವ ಸಾಧ್ಯತೆಯಿದೆ ಎಂದು ಅರ್ಜಿದಾರರ ಪರ ಹಿರಿಯ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಚೇತನ್ ಶರ್ಮಾ, CJPಯ ಚಟುವಟಿಕೆಗಳನ್ನು ನಿಯಂತ್ರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಅರ್ಜಿದಾರರು ವ್ಯಕ್ತಪಡಿಸಿರುವ ಆತಂಕವನ್ನು ಪರಿಹರಿಸುವುದಾಗಿಯೂ ಭರವಸೆ ನೀಡಿದರು.
ಪೊಲೀಸರ ಭರವಸೆಯನ್ನು ದಾಖಲಿಸಿಕೊಂಡ ನ್ಯಾಯಾಲಯ, ಪ್ರತಿಭಟನೆಗೆ ತಡೆ ನೀಡಲು ನಿರಾಕರಿಸಿತು.



