ನವದೆಹಲಿ: ಸಂಸತ್ ಮಾರ್ಗ ಪ್ರದೇಶದಲ್ಲಿ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್‌ಎಸ್‌ಯುಐ) ನಡೆಸಿದ ಪ್ರತಿಭಟನೆಯಲ್ಲಿನ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸೋಮವಾರ(ಅ.5) ನಾಲ್ಕು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.
ಚುನಾವಣಾ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆ ಮತ್ತು ಬಂಧನಕ್ಕೆ ಆಗ್ರಹಿಸಿ ಎನ್‌ಎಸ್‌ಯುಐ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯಲ್ಲಿ ಹಿಂಸಾಚಾರ ನಡೆದಿದೆ ಎಂದು ಹೇಳಿದ್ದಾರೆ.
ಇದರಲ್ಲಿ ಸಿಐಎಸ್‌ಎಫ್ ಸಿಬ್ಬಂದಿ ಮೇಲಿನ ಇರಿತ, ಗಲಭೆ, ಸಾರ್ವಜನಿಕ ಆಸ್ತಿ ಹಾನಿ ಮತ್ತು ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿಪಡಿಸಿದ ಪ್ರಕರಣಗಳು ಸೇರಿವೆ. ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಒಟ್ಟು 18 ಜನರನ್ನು ಬಂಧಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ತಿಳಿದ್ದಾರೆ.
ಪ್ರತಿಭಟನಾಕಾರರು ಜಂತರ್ ಮಂತರ್ ಕಡೆಗೆ ಮೆರವಣಿಗೆ ಸಾಗಲು ಯತ್ನಿಸಿದರು. ಈ ವೇಳೆ ಬ್ಯಾರಿಕೇಡ್ ಬಳಿಯಿಂದ ಪ್ರತಿಭಟನಾಕಾರರೊಬ್ಬರನ್ನು ಕರೆದೊಯ್ಯುತ್ತಿದ್ದ ವಿಕ್ರಮ್ ಕುಮಾರ್ ಎಂಬ ಸಿಐಎಸ್‌ಎಫ್ ಕಾನ್‌ಸ್ಟೇಬಲ್ ಮೇಲೆ ಚಾಕುವಿನಿಂದ ದಾಳಿ ನಡೆಸಲಾಗಿದೆ ಎನ್ನಲಾಗಿದೆ. ಅವರ ಬಲ ಮೊಣಕೈಗೆ ಸಣ್ಣಪುಟ್ಟ ಗಾಯಗಳಾಗಿದ್ದು, ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸೆಗಾಗಿ ಆರ್‌ಎಂಎಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆರೋಪಿ ಪ್ರತಿಭಟನಾಕಾರನನ್ನು ವಶಕ್ಕೆ ಪಡೆಯಲಾಗಿದ್ದು, ಕಾನೂನು ಕ್ರಮ ಕೈಗೊಳ್ಳಲಾಗಿದೆ. ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಕಾನ್‌ಸ್ಟೇಬಲ್ ಮೇಲಿನ ದಾಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಎಸ್‌ಐಆರ್ ಪ್ರಕ್ರಿಯೆ ಮತ್ತು ಚುನಾವಣಾ ಆಯೋಗದ ಮೇಲಿನ ಆರೋಪಗಳ ಕುರಿತು ವ್ಯಾಪಕ ರಾಜಕೀಯ ಚರ್ಚೆ ನಡೆಯುತ್ತಿರುವ ನಡುವೆಯೇ ಈ ಪ್ರತಿಭಟನೆಗಳು ನಡೆದಿವೆ.

