ಮುಂಬೈ: ಮಹಾತ್ಮ ಗಾಂಧಿ ಜಯಂತಿಯಂದು (ಅಕ್ಟೋಬರ್ 2ರಂದು) ಶಿವಾಜಿ ಪಾರ್ಕ್‌ನಲ್ಲಿ ನಡೆಸಿದ ಪ್ರತಿಭಟನೆಗೆ ಸಂಬಂಧಿಸಿದಂತೆ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಂಘಟಕರು ಹಾಗೂ ಸುಮಾರು 500 ಅಪರಿಚಿತರ ವಿರುದ್ಧ ಮುಂಬೈ ಪೊಲೀಸರು ಶನಿವಾರ ಎಫ್‌ಐಆರ್ ದಾಖಲಿಸಿದ್ದಾರೆ.
ಶಿವಾಜಿ ಪಾರ್ಕ್ ಪ್ರದೇಶದ ನಿವಾಸಿಯೊಬ್ಬರು ನೀಡಿದ ದೂರಿನನ್ವಯ ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಥಳೀಯ ಠಾಣೆಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಕಾನೂನುಬಾಹಿರವಾಗಿ ಗುಂಪುಗೂಡಿದ್ದು, ಸರ್ಕಾರದ ಆದೇಶವನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ್ದು ಸೇರಿದಂತೆ ಇತರ ಅಪರಾಧಗಳ ಆರೋಪ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆ ಮತ್ತು ಮಹಾರಾಷ್ಟ್ರ ಪೊಲೀಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
'ಪ್ರಕರಣ ಸಂಬಂಧ ಈವರೆಗೆ ಯಾರನ್ನೂ ಬಂಧಿಸಿಲ್ಲ. ತನಿಖೆ ಪ್ರಗತಿಯಲ್ಲಿದೆ' ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.
ದೇಶದಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಪ್ರತಿಭಟನೆ ನಡೆಸುತ್ತಿರುವ ಸಿಜೆಪಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿದೆ. ಇದೇ ವಿಚಾರವಾಗಿ ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ನೇತೃತ್ವದಲ್ಲಿ ಶಿವಾಜಿ ಪಾರ್ಕ್‌ನಲ್ಲಿ ಶುಕ್ರವಾರ ಪ್ರತಿಭಟನೆ ನಡೆದಿತ್ತು.

