ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರು ಬುಧವಾರ ಇಂಡಿಯಾ ಮೈತ್ರಿಕೂಟದ ಕುರಿತು ತಮ್ಮ ಪಕ್ಷದ ನಿಲುವಿನ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಹೋರಾಡುವುದು ನಮ್ಮ ಮತ್ತು ಇಂಡಿಯಾ ಮೈತ್ರಿಕೂಟದ ಉದ್ದೇಶವಾಗಿದೆ ಎಂದು ಹೇಳಿದ್ದಾರೆ.
CJP ಒಂದು ಸ್ವತಂತ್ರ ಗುಂಪಾಗಿದ್ದು, ಯಾವಾಗಲೂ ಹಾಗೆಯೇ ಮುಂದುವರಿಯಲಿದೆ. ಹೀಗೆಂದರೆ, ನಾವು ಇಂಡಿಯಾ ಮೈತ್ರಿಕೂಟದ ವಿರುದ್ಧವಾಗಿದ್ದೇವೆ ಎಂದರ್ಥವಲ್ಲ ಎಂದು ಅವರು ಹೇಳಿದ್ದಾರೆ.
ನಾವೆಲ್ಲರೂ ಒಂದೇ ಉದ್ದೇಶಕ್ಕಾಗಿ ಒಗ್ಗೂಡಿದ್ದೇವೆ. ಚುನಾವಣೆಗಳಲ್ಲಿ ಅಕ್ರಮ ಎಸಗುವ ಮೂಲಕ ನರೇಂದ್ರ ಮೋದಿ ಅವರು ಅಧಿಕಾರದಲ್ಲಿ ಮುಂದುವರಿಯಲು ನೆರವಾಗುತ್ತಿದ್ದಾರೆ ಎಂದು ಆರೋಪಿಸಿ ಜ್ಞಾನೇಶ್ ಕುಮಾರ್ ವಿರುದ್ಧ ಹೋರಾಡುತ್ತಿದ್ದೇವೆ. ಕಾಕ್ರೋಚ್ ಜನತಾ ಪಾರ್ಟಿ ಸ್ವತಂತ್ರ ಒತ್ತಡ ಗುಂಪಾಗಿದ್ದು, ಯಾವಾಗಲೂ ಸ್ವತಂತ್ರವಾಗಿಯೇ ಉಳಿಯಲಿದೆ. ಹೀಗೆಂದ ಮಾತ್ರಕ್ಕೆ ನಾವು ಇಂಡಿಯಾ ಮೈತ್ರಿಕೂಟದ ವಿರುದ್ಧವಾಗಿದ್ದೇವೆ ಎಂದರ್ಥವಲ್ಲ. ನಮ್ಮ ಪ್ರತಿಭಟನೆಗಳು ಮತ್ತು ಇಂಡಿಯಾ ಮೈತ್ರಿಕೂಟದ ಪ್ರತಿಭಟನೆಗಳು ಒಂದೇ ಉದ್ದೇಶವನ್ನು ಹೊಂದಿದೆ ಎಂದು ಅಭಿಜೀತ್ ದೀಪ್ಕೆ ಹೇಳಿದ್ದಾರೆ.
CJP ರಾಜಕೀಯ ಪಕ್ಷವಾಗಿ ನೋಂದಣಿಯಾಗುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ದೀಪ್ಕೆ, ಅಂತಹ ಯಾವುದೇ ಯೋಜನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಇಂಡಿಯಾ ಮೈತ್ರಿಕೂಟ ನಡೆಸುತ್ತಿರುವ ಪ್ರತಿಭಟನೆಗಳಿಗೆ CJP ಬಹಿರಂಗವಾಗಿ ಬೆಂಬಲ ನೀಡುತ್ತಿಲ್ಲ ಎಂಬ ಪ್ರಶ್ನೆಗಳ ನಡುವೆ ದೀಪ್ಕೆ ಈ ಸ್ಪಷ್ಟನೆ ನೀಡಿದ್ದಾರೆ.



