ವಾಷಿಂಗ್ಟನ್: ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷವನ್ನು ಭಾರಿ ಸುಂಕ ವಿಧಿಸುವ ಬೆದರಿಕೆ ಹಾಕಿ ತಡೆದಿದ್ದೇನೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ.
ಫ್ಲೋರಿಡಾದಲ್ಲಿ ಶುಕ್ರವಾರ ನಡೆದ ಮಧ್ಯಂತರ ಚುನಾವಣೆ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಅವರು, ತಮ್ಮ ರಾಜತಾಂತ್ರಿಕ ಪ್ರಯತ್ನಗಳಿಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗದಿದ್ದಕ್ಕೆ ಬೇಸರವನ್ನೂ ವ್ಯಕ್ತಪಡಿಸಿದ್ದಾರೆ.
2025ರ ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಹಲವರು ಮೃತಪಟ್ಟಿದ್ದರು. ಬಳಿಕ, ಭಾರತವು ಮೇ ತಿಂಗಳಲ್ಲಿ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ (ಪಿಒಕೆ) ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿಕೊಂಡು ಆಪರೇಷನ್ ಸಿಂಧೂರ ಆರಂಭಿಸಿತ್ತು.
'ಭಾರತ ಮತ್ತು ಪಾಕಿಸ್ತಾನ ಎಂಬ ಎರಡು ಪರಮಾಣು ಶಸ್ತ್ರಾಸ್ತ್ರ ಹೊಂದಿರುವ ರಾಷ್ಟ್ರಗಳಿಗೆ, ಸಂಘರ್ಷ ಮುಂದುವರಿಸಿದರೆ ಅಮೆರಿಕದೊಂದಿಗೆ ವ್ಯಾಪಾರ ಮಾಡಲು ಸಾಧ್ಯವಾಗುವುದಿಲ್ಲ. ಎರಡೂ ದೇಶಗಳ ಮೇಲೆ ಶೇ 250 ರಷ್ಟು ಸುಂಕ ವಿಧಿಸುವುದಾಗಿ ಹೇಳಿದ್ದೆ' ಎಂದು ಟ್ರಂಪ್ ತಿಳಿಸಿದ್ದಾರೆ.
ಎರಡೂ ದೇಶಗಳು ತೀವ್ರ ಅಸಮಾಧಾನಗೊಂಡಿದ್ದರೂ ಗುಂಡಿನ ದಾಳಿ ನಿಲ್ಲಿಸಿದವು. ಸಂಘರ್ಷದಲ್ಲಿ 11 ವಿಮಾನಗಳನ್ನು ಹೊಡೆದುರುಳಿಸಲಾಗಿತ್ತು. ಈ ಪ್ರಯತ್ನದಲ್ಲಿ ವಿಶ್ವಸಂಸ್ಥೆಯ ನೆರವು ಪಡೆದಿರಲಿಲ್ಲ. ಎಂಟು ಯುದ್ಧಗಳನ್ನು ಇತ್ಯರ್ಥಪಡಿಸಿದ್ದರೂ ನೊಬೆಲ್ ಶಾಂತಿ ಪ್ರಶಸ್ತಿ ದೊರೆತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.



