ನವದೆಹಲಿ: ಪ್ರತಿಭಟನೆಯನ್ನು ಹತ್ತಿಕ್ಕಲು ಕೇಂದ್ರ ಹಾಗೂ ದೆಹಲಿ ಸರ್ಕಾರ ಕೈಗೊಂಡ ಕ್ರಮಗಳಿಂದ ಹಿಂದೆ ಸರಿಯುವುದಿಲ್ಲ. ದೇಶದ ಎಲ್ಲ ನಾಗರಿಕರು ಬೀದಿಗೆ ಇಳಿಯಿರಿ ಎಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಭಾನುವಾರ ಕರೆ ನೀಡಿದೆ.
ದೇಶದಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ ಭಾರಿ ಅಕ್ರಮಗಳು ನಡೆದಿವೆ ಎಂದು ಆರೋಪಿಸುತ್ತಿರುವ ಸಿಜೆಪಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಪಟ್ಟು ಹಿಡಿದಿದೆ.
ಈ ಹಿನ್ನೆಲೆಯಲ್ಲಿ ಜಂತರ್ ಮಂತರ್‌ನಲ್ಲಿ ಶನಿವಾರ ಬೃಹತ್ ಪ್ರತಿಭಟನೆ ಆಯೋಜಿಸಲು ಉದ್ದೇಶಿಸಿತ್ತು.
ಆದರೆ, ದೆಹಲಿಯಾದ್ಯಂತ ಭಾರಿ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿದ್ದ ಸರ್ಕಾರ, ಪ್ರತಿಭಟನೆಯನ್ನು ಹತ್ತಿಕ್ಕಲು ಹರಸಾಹಸ ಮಾಡಿತ್ತು.
ಮುಂಜಾಗ್ರತಾ ಕ್ರಮವಾಗಿ, ಸಿಜೆಪಿ ನಾಯಕರಾದ ಅಭಿಜೀತ್ ದೀಪ್ಕೆ, ಆಶುತೋಷ್ ರಾಂಕಾ ಮತ್ತು ಸೌರವ್ ದಾಸ್ ಅವರನ್ನು ವಶಕ್ಕೆ ಪಡೆಯಲಾಗಿತ್ತು. ಯುಟ್ಯೂಬರ್ ಧ್ರುವ್ ರಾಠಿ ಸೇರಿದಂತೆ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದ ಸಾಕಷ್ಟು ನಾಯಕರು, ರಾಜಕೀಯ ಮುಖಂಡರು, ನಟರನ್ನು ವಶಕ್ಕೆ ಪಡೆಯಲಾಗಿತ್ತು.
ಇದರ ಹೊರತಾಗಿಯೂ, ದೆಹಲಿ ಬೀದಿಗಳಲ್ಲಿ ಭಾರಿ ಸಂಖ್ಯೆಯಲ್ಲಿ ಜಮಾಯಿಸಿದ್ದ ವಿದ್ಯಾರ್ಥಿ ಸಂಘಟನೆಗಳ ಪ್ರತಿನಿಧಿಗಳು, ಯುವಕರು ಜ್ಞಾನೇಶ್ ಕುಮಾರ್ ಹಾಗೂ ಚುನಾವಣಾ ಆಯೋಗದ ವಿರುದ್ಧ ಘೋಷಣೆ ಮೊಳಗಿಸಿದ್ದರು.



