ನವದೆಹಲಿ: ದಿಲ್ಲಿಯಲ್ಲಿ ಕಳೆದ ಕೆಲವು ದಿನಗಳಿಂದ ಮುಖ್ಯ ಚುನಾವಣಾ ಆಯುಕ್ತರ (CEC) ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳು ಹಾಗೂ ಅವುಗಳಿಗೆ ಸಂಬಂಧಿಸಿದ ನಿರ್ಬಂಧಗಳ ಕುರಿತು ಕೇಳಿದ ಪ್ರಶ್ನೆಗೆ, "ಇದು ನನ್ನ ವಿಷಯವಲ್ಲ. ಇದು ನನ್ನ ವ್ಯಾಪ್ತಿಗೆ ಬರುವುದಿಲ್ಲ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಸೋಮವಾರ ಪ್ರತಿಕ್ರಿಯಿಸಿದ್ದಾರೆ.
ವಿಜ್ಞಾನ ಭವನದಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (NHRC) 33ನೇ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಜೆಐ ಸೂರ್ಯಕಾಂತ್, ಇದು ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ವಿಷಯ. ಇದು ನನ್ನ ವಿಷಯವಲ್ಲ ಎಂದು ಹೇಳಿದ್ದಾರೆ.
ಕಳೆದ ಕೆಲವು ದಿನಗಳಿಂದ ದಿಲ್ಲಿಯ ವಿವಿಧ ಭಾಗಗಳಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿವೆ. ವಾರಾಂತ್ಯದಲ್ಲಿ ರಾಜಧಾನಿಯಲ್ಲಿ ಭಾರೀ ಪ್ರಮಾಣದಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. 45 ಮೆಟ್ರೋ ನಿಲ್ದಾಣಗಳನ್ನು ಮುಚ್ಚಲಾಗಿತ್ತು. ನಗರದ ಗಡಿಭಾಗಗಳಲ್ಲಿ ತೀವ್ರ ತಪಾಸಣೆ ನಡೆಸಲಾಗಿತ್ತು.
ಕಾಕ್ರೋಚ್ ಜನತಾ ಪಾರ್ಟಿ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ ಸಾವಿರಾರು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.



