ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಸಲ್ಲಿಸಲಾಗಿದ್ದ ಅರ್ಜಿ ಸಂಬಂಧ, ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದೆ.
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ (ಎಸ್‌ಐಆರ್) ಇಬ್ಬರು ಚುನಾವಣಾ ಆಯುಕ್ತರ ಸಮ್ಮತಿಯಿಲ್ಲದೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಎನ್ನುವ ಅರೋಪಗಳಿದ್ದು, ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.
ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ ಹಾಗೂ ನ್ಯಾಯಮೂರ್ತಿಗಳಾದ ಜಾಯ್‌ಮಾಲ್ಯ ಬಾಗ್ಚಿ ಹಾಗೂ ವಿ. ಮೋಹನ ಅವರ ಪೀಠದ ಮುಂದೆ ಈ ಅರ್ಜಿ ವಿಚಾರಣೆಗೆ ಬಂತು.
ಪಟ್ನಾ ನಿವಾಸಿ ರಾಕೇಶ್ ಕುಮಾರ್ ಸಿಂಗ್ ಈ ಅರ್ಜಿ ಸಲ್ಲಿಸಿದ್ದರು. ಅವರ ಪರವಾಗಿ ಹಿರಿಯ ವಕೀಲ ವಿಕಾಸ್ ಸಿಂಗ್ ಹಾಜರಾದರು. ಅವರ ಅರಿಕೆಯನ್ನು ಆಲಿಸಿದ ಕೋರ್ಟ್, ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿ, ಒಂದು ವಾರದೊಳಗೆ ಉತ್ತರಿಸಲು ಸೂಚಿಸಿದೆ.
ಚುನಾವಣಾ ಆಯುಕ್ತರು ಒಟ್ಟಾಗಿ ನಿರ್ಧಾರ ತೆಗೆದುಕೊಳ್ಳಬೇಕು ಎನ್ನುವುದು ಕಾನೂನು, ಆದರೆ ಜ್ಞಾನೇಶ್ ಕುಮಾರ್ ಏಕಪಕ್ಷೀಯವಾಗಿ ನಡೆದುಕೊಂಡಿದ್ದಾರೆ ಎನ್ನುವ ಆರೋಪವನ್ನು ಪರೀಶಿಲನೆ ನಡೆಸಬೇಕು, ಒಂದು ವೇಳೆ ಹಾಗೆ ಮಾಡಿದ್ದರೆ ಅವರ ನಿರ್ಧಾರವನ್ನು ಕಾನೂನು ಬಾಹಿರ ಎಂದು ಘೋಷಿಸಿ, ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಅರ್ಜಿಯಲ್ಲಿ ಭಿನ್ನವಿಸಲಾಗಿತ್ತು.
ಚುನಾವಣಾ ಆಯೋಗವು ಸರ್ವಾನುತಮದಿಂದ ಅಥವಾ ಬಹುಮತದಿಂದ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಆಯೋಗ ಅದೇ ರೀತಿ ನಡೆದುಕೊಂಡಿದೆ ಎಂದು ನಾವು ಭಾವಿಸುತ್ತೇವೆ ಎಂದು ಕೋರ್ಟ್ ಹೇಳಿತು.

