ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ವಿಚಾರಣಾ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ಮಾನನಷ್ಟ ಮೊಕದ್ದಮೆಯ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆಯಾಜ್ಞೆ ನೀಡಿದೆ.
ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಅಪರೇಶ್ ಕುಮಾರ್ ಸಿಂಗ್ ಅವರನ್ನೊಳಗೊಂಡ ಪೀಠವು ಈ ಸಂಬಂಧ ಮಹಾರಾಷ್ಟ್ರ ಸರ್ಕಾರ ಹಾಗೂ ದೂರುದಾರ ಎಂ.ಎಚ್. ಶ್ರೀಶ್ರೀಮಲ್ ಅವರಿಗೆ ನೋಟಿಸ್ ಜಾರಿ ಮಾಡಿದೆ. ನೋಟಿಸ್‌ಗೆ ನಾಲ್ಕು ವಾರಗಳೊಳಗೆ ಉತ್ತರ ಸಲ್ಲಿಸುವಂತೆ ನ್ಯಾಯಪೀಠ ನಿರ್ದೇಶನ ನೀಡಿದೆ.
'ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ನೋಟಿಸ್ ನೀಡಲಾಗಿದೆ. ಅಲ್ಲಿಯವರೆಗೆ ವಿಚಾರಣಾ ನ್ಯಾಯಾಲಯದಲ್ಲಿನ ಮುಂದಿನ ಪ್ರಕ್ರಿಯೆಗಳಿಗೆ ತಡೆ ಇರಲಿದೆ' ಎಂದು ಪೀಠ ಆದೇಶಿಸಿತು.
ಸಮನ್ಸ್ ರದ್ದುಪಡಿಸಲು ನಿರಾಕರಿಸಿದ್ದ ಬಾಂಬೆ ಹೈಕೋರ್ಟ್‌ನ ಸೆಪ್ಟೆಂಬರ್ 8ರ ಆದೇಶವನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ವೇಳೆ ನ್ಯಾಯಾಲಯ ಈ ಆದೇಶ ನೀಡಿದೆ.
ಸೆಪ್ಟೆಂಬರ್ 2018ರಲ್ಲಿ ರಾಜಸ್ಥಾನದಲ್ಲಿ ನಡೆದ ರ್‍ಯಾಲಿಯೊಂದರಲ್ಲಿ ಮಾತನಾಡಿದ್ದ ವೇಳೆ ರಾಹುಲ್ ಅವರು ಮಾನಹಾನಿ ಹೇಳಿಕೆ ನೀಡಿದ್ದರು ಎಂದು ದೂರುದಾರರು ಆರೋಪಿಸಿದ್ದರು.



