ನವದೆಹಲಿ : ಗ್ರೇಟ್ ನಿಕೋಬರ್ ದ್ವೀಪದ ಮೂಲಸೌಕರ್ಯ ಯೋಜನೆಗಾಗಿ ಒಪ್ಪಿಗೆ ಪಡೆಯುವಾಗ ಅರಣ್ಯ ಹಕ್ಕುಗಳ ಕಾಯ್ದೆಯನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣಾ ಅರ್ಹತೆಯನ್ನು ಎತ್ತಿಹಿಡಿದ ಕಲ್ಕತ್ತಾ ಹೈಕೋರ್ಟ್ ಆದೇಶದ ವಿರುದ್ಧ, ಕೇಂದ್ರ ಸರ್ಕಾರವು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜಾಯ್‌ಮಾಲ್ಯಾ ಬಾಗ್ಚಿ ಮತ್ತು ವಿ.ಮೋಹನಾ ಅವರನ್ನು ಒಳಗೊಂಡ ನ್ಯಾಯಪೀಠವು, 'ಹೈಕೋರ್ಟ್‌ನಲ್ಲಿ ಪ್ರಕರಣದ ವಿಚಾರಣೆ ಬಾಕಿ ಇದೆ. ನವೆಂಬರ್ 25 ಮತ್ತು 26ರಂದು ವಿಚಾರಣೆಗಾಗಿ ಪಟ್ಟಿ ಮಾಡಲಾಗಿದೆ' ಎಂದು ತಿಳಿಸಿ ಅರ್ಜಿಯನ್ನು ವಜಾಗೊಳಿಸಿದೆ.
ಬಾಕಿ ಉಳಿದಿರುವ ಅರ್ಜಿಗಳೊಂದಿಗೆ ನಿಗದಿತ ದಿನಾಂಕದಂದು ವಿಚಾರಣೆ ನಡೆಸುವಂತೆ ಹೈಕೋರ್ಟ್‌ಗೆ ನ್ಯಾಯಪೀಠ ಸೂಚಿಸಿದೆ.

