ನವದೆಹಲಿ: ವಿಪಕ್ಷಗಳ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸಿಇಸಿ ಜ್ಞಾನೇಶ್ ಕುಮಾರ್ ಅವರ ನಿವಾಸದ ಹೊರಗೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಅವರಿಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜ್ಞಾನೇಶ್ ಕುಮಾರ್ ಅವರಿಗೆ ಈಗಾಗಲೇ Z-ಪ್ಲಸ್ ಭದ್ರತಾ ವ್ಯವಸ್ಥೆ ಇದೆ.
ಆದರೆ ಇತ್ತೀಚಿನ ಗುಪ್ತಚರ ಮಾಹಿತಿ ಹಾಗೂ ದಿಲ್ಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅವರ ನಿವಾಸದ ಹೊರಗೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದಿಲ್ಲಿಯಲ್ಲಿ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲಾ ಭದ್ರತಾ ಏಜೆನ್ಸಿಗಳಿಗೆ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ನಿರ್ದೇಶಿಸಲಾಗಿದೆ ಎಂದು ತಿಳಿದು ಬಂದಿದೆ.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)ಯಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ದೇಶದಾದ್ಯಂತ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಅವರಿಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ.



