ನವದೆಹಲಿ: ಪ್ರತಿಭಟನೆ ನಡೆಸಲು ಅನುಮತಿ ಇರುವ ಸ್ಥಳಗಳ ಪಟ್ಟಿಯಿಂದ ಜಂತರ್ ಮಂತರ್ ಅನ್ನು ಕೇಂದ್ರ ಸರ್ಕಾರ ಕೈಬಿಟ್ಟ ಬೆನ್ನಲ್ಲೇ, ಬುಧವಾರ ಬೆಳಿಗ್ಗೆ ಪ್ರತಿಭಟನೆ ನಡೆಸಲು ಮುಂದಾದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಾಯಕರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪಕ್ಷದ ಮುಖಂಡರಾದ ಅಶುತೋಷ್ ರಾಂಕಾ ಮತ್ತು ಸೌರವ್ ದಾಸ್ ಅವರ ನೇತೃತ್ವದಲ್ಲಿ ಸಿಜೆಪಿ ಕಾರ್ಯಕರ್ತರು ಬುಧವಾರ ಬೆಳಿಗ್ಗೆ ಜಂತರ್ ಮಂತರ್‌ಗೆ ತೆರಳಿ ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಈ ಸಂದರ್ಭದಲ್ಲಿ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.
ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ವಿಡಿಯೊ ಹಂಚಿಕೊಂಡಿದ್ದಾರೆ. ಈ ವಿಡಿಯೊದಲ್ಲಿ, ಕಾರ್ಯಕರ್ತರು ಪೊಲೀಸ್ ಬ್ಯಾರಿಕೇಡ್‌ಗಳನ್ನು ಹಾರಿ ಜಂತರ್ ಮಂತರ್ ಆವರಣ ಪ್ರವೇಶಿಸಿ ತ್ರಿವರ್ಣ ಧ್ವಜ ಪ್ರದರ್ಶಿಸಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ತಿಕ್ಕಾಟ ಉಂಟಾಗಿದೆ.
'ಭಾರತ್ ಮಾತಾ ಕೀ ಜೈ' ಹಾಗೂ 'ಇಂಕ್ವಿಲಾಬ್ ಜಿಂದಾಬಾದ್' ಘೋಷಣೆಗಳನ್ನು ಕೂಗಿದ್ದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ದೀಪ್ಕೆ, ನಮ್ಮ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿಗೆ ಟ್ಯಾಗ್ ಮಾಡಿದ್ದಾರೆ.


