ಬದಿಯಡ್ಕ: ಕುಂಬ್ಡಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳಿಂಜ, ಅಲಿಂಜ, ಪೊಸಲಿಗೆ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಕಾಡುಹಂದಿಗಳ ಹಾವಳಿ ಮಿತಿಮೀರಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಕೃಷಿ ಬೆಳೆಗಳು ನಾಶವಾಗಿವೆ.
ಕಳೆದ ಕೆಲವು ದಿನಗಳಿಂದ ರಾತ್ರಿ ವೇಳೆ ಹಿಂಡು ಹಿಂಡಾಗಿ ತೋಟ ಮತ್ತು ಗದ್ದೆಗಳಿಗೆ ಲಗ್ಗೆ ಇಡುತ್ತಿರುವ ಕಾಡುಹಂದಿಗಳು, ರೈತರು ಕಷ್ಟಪಟ್ಟು ಬೆಳೆಸಿದ ಅಡಿಕೆ, ತೆಂಗು, ಬಾಳೆ ಗಿಡಗಳನ್ನು ಬುಡಸಮೇತ ಕಿತ್ತು ಹಾಕುತ್ತಿವೆ. ಭತ್ತದ ಗದ್ದೆಗಳಿಗೂ ನುಗ್ಗಿ ಬೆಳೆಯನ್ನು ಸಂಪೂರ್ಣವಾಗಿ ಹಾಳುಗೆಡವಿವೆ. ಇದರಿಂದಾಗಿ ಈ ಭಾಗದ ಕೃಷಿಕರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಪ್ರಾಣಾಪಾಯದ ಭೀತಿ: ಈ ಪ್ರದೇಶದಲ್ಲಿ ಕಾಡುಹಂದಿಗಳ ಉಪಟಳ ಹೊಸದೇನಲ್ಲ. ಕೆಲವು ವರ್ಷಗಳ ಹಿಂದೆ ಇದೇ ಭಾಗದಲ್ಲಿ ಕಾಡುಹಂದಿ ದಾಳಿಗೆ ಓರ್ವ ಮಹಿಳೆ ಬಲಿಯಾಗಿದ್ದರೆ, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಹೀಗಾಗಿ, ಕೃಷಿ ನಾಶದ ಜೊತೆಗೆ ಸ್ಥಳೀಯರಲ್ಲಿ ಪ್ರಾಣಭಯವೂ ಆವರಿಸಿದೆ.
ಕ್ರಮಕ್ಕೆ ಆಗ್ರಹ: ಕಾಡುಹಂದಿಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರಲಾಗಿದ್ದರೂ ಇದುವರೆಗೆ ಯಾವುದೇ ಶಾಶ್ವತ ಕ್ರಮ ಕೈಗೊಂಡಿಲ್ಲ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೂಡಲೇ ಪಂಚಾಯತ್ ಅಧಿಕಾರಿಗಳು ಹಾಗೂ ಅರಣ್ಯ ಇಲಾಖೆಯು ಎಚ್ಚೆತ್ತುಕೊಂಡು ಕಾಡುಹಂದಿಗಳ ಹಾವಳಿಯನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಬೆಳೆ ನಷ್ಟಕ್ಕೆ ಪರಿಹಾರ ಒದಗಿಸಬೇಕು ಎಂದು ಸ್ಥಳೀಯ ಕೃಷಿಕರು ಒತ್ತಾಯಿಸಿದ್ದಾರೆ.

.jpg)
