ಬದಿಯಡ್ಕ: ಗಡಿನಾಡ ಕನ್ನಡದ ಕಣ್ಮಣಿ, ಸ್ವಾತಂತ್ರ್ಯ ಹೋರಾಟಗಾರ ಹಾಗೂ ಹಿರಿಯ ಸಾಹಿತಿ ನಾಡೋಜ ಡಾ. ಕಯ್ಯಾರ ಕಿಞ್ಞಣ್ಣ ರೈ ಅವರ ಸ್ಮರಣಾರ್ಥ ಕರ್ನಾಟಕ ಸರ್ಕಾರದ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅನುದಾನದಲ್ಲಿ ಬದಿಯಡ್ಕದಲ್ಲಿ ನಿರ್ಮಿಸಲಾಗಿರುವ 'ಕನ್ನಡ ಭವನ'ದ ಉದ್ಘಾಟನಾ ಸಮಾರಂಭವು ಇದೇ ನವೆಂಬರ್ 30ರಂದು ನೆರವೇರಲಿದೆ.
ಈ ಐತಿಹಾಸಿಕ ಕಾರ್ಯಕ್ರಮದ ಪೂರ್ವಸಿದ್ಧತೆ ಹಾಗೂ ಯಶಸ್ವಿ ಸಂಘಟನೆಗಾಗಿ ಇಂದು (ನವೆಂಬರ್ 19, ಗುರುವಾರ) ಅಪರಾಹ್ನ 2 ಗಂಟೆಗೆ ಬದಿಯಡ್ಕ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಪೂರ್ವಭಾವಿ ಸಮಾಲೋಚನಾ ಸಭೆಯನ್ನು ಆಯೋಜಿಸಲಾಗಿದೆ. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ ಅವರು ಈ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.
ಕನ್ನಡದ ಅಸ್ಮಿತೆಯ ಸಂಕೇತವಾಗಿ ನಿರ್ಮಾಣಗೊಂಡಿರುವ ಈ ಕನ್ನಡ ಭವನದ ಉದ್ಘಾಟನಾ ಸಮಾರಂಭವನ್ನು ಕನ್ನಡಿಗರ ಒಗ್ಗಟ್ಟಿನ ಹಬ್ಬವನ್ನಾಗಿ ಆಚರಿಸಲು ಉದ್ದೇಶಿಸಲಾಗಿದೆ. ಈ ಮಹತ್ವದ ಕನ್ನಡಪರ ಕಾರ್ಯಕ್ರಮದ ಯಶಸ್ಸಿಗಾಗಿ ಎಲ್ಲಾ ಕನ್ನಡಾಭಿಮಾನಿಗಳು, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ಸಾಹಿತಿಗಳು, ಕಲಾವಿದರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಚಿಂತಕರು ಹೆಚ್ಚಿನ ಸಂಖ್ಯೆಯಲ್ಲಿ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ-ಸಹಕಾರ ನೀಡಬೇಕೆಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮತ್ತೀಹಳ್ಳಿ ಪ್ರಕಟಣೆಯಲ್ಲಿ ಕೋರಿದ್ದಾರೆ.



