ಕುಂಬಳೆ: ರಾಷ್ಟ್ರೀಯ ಹೆದ್ದಾರಿಯ ಶಿರಿಯ (ಶಿರಿಯಕುನ್ನು) ಪ್ರದೇಶದಲ್ಲಿ ಪೊಲೀಸ್ ಇಲಾಖೆಯ ಹೈವೇ ಪೆಟ್ರೋಲಿಂಗ್ ವಾಹನದ ಹಿಂಭಾಗಕ್ಕೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವಾಹನದಲ್ಲಿದ್ದ ಎಸ್‌ಐ ಸೇರಿದಂತೆ ನಾಲ್ವರು ಪೊಲೀಸರು ಗಾಯಗೊಂಡ ಘಟನೆ ಮಂಗಳವಾರ ನಸುಕಿನಲ್ಲಿ ನಡೆದಿದೆ.
ಅಪಘಾತದಲ್ಲಿ ಹೈವೇ ಪೆಟ್ರೋಲಿಂಗ್ ವಾಹನದಲ್ಲಿದ್ದ ಎಸ್‌ಐ ರಾಘವನ್, ಸಿಬ್ಬಂದಿಯಾದ ನಿಖಿಲ್ ಮನು, ವಿನು ಹಾಗೂ ಚಾಲಕ ಸುಭಾಷ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ತಕ್ಷಣವೇ ಮಂಗಳ್ಪಾಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಮಂಗಳವಾರ ನಸುಕಿನ 1.30ರ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಪೊಲೀಸರು ತಲಪಾಡಿಯಿಂದ ಕಾಸರಗೋಡು ಕಡೆಗೆ ಗಸ್ತು ಮುಗಿಸಿ ವಾಪಸಾಗುತ್ತಿದ್ದ ವೇಳೆ, ಮಂಗಳೂರು ಕಡೆಯಿಂದ ಕುಂಬಳೆ ಮಾರ್ಗವಾಗಿ ಅತಿವೇಗ ಹಾಗೂ ಅಜಾಗರೂಕತೆಯಿಂದ ಬಂದ ಆಂಧ್ರಪ್ರದೇಶ ನೋಂದಣಿಯ ಕಾರು ಹಿಂಬದಿಯಿಂದ ರಭಸವಾಗಿ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ತೀವ್ರತೆಗೆ ಕಾರು ಚಾಲಕ, ಮಂಗಳೂರು ನಿವಾಸಿ ವಿನೋದ್ ರಾಜ್ (36) ಎಂಬವರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆಗೆ ಸಂಬಂಧಿಸಿದಂತೆ ಕುಂಬಳೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.


