ಕಾಸರಗೋಡು: ನಿಷೇಧಿತ ಮಾದಕವಸ್ತು ಎಂಡಿಎಂಎ (MDMA) ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ವ್ಲಾಗರ್ ಒಬ್ಬರನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ. ಮಧೂರು ನಿವಾಸಿ ಹೈದರ್ ಮಧೂರು (41) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ವಿದ್ಯಾನಗರ ಠಾಣೆ ಪೊಲೀಸರು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ವಿಶೇಷ ತಂಡ ಜಂಟಿಯಾಗಿ ನಡೆಸಿದ ವಾಹನ ತಪಾಸಣೆಯ ವೇಳೆ ಆರೋಪಿ ಸಿಕ್ಕಿಬಿದ್ದಿದ್ದಾನೆ. ಮಾದಕವಸ್ತು ವ್ಯವಹಾರದ ಕುರಿತು ದೊರೆತ ಖಚಿತ ಮಾಹಿತಿಯ ಮೇರೆಗೆ ಜಿಲ್ಲಾ ಮಾದಕವಸ್ತು ನಿಗ್ರಹ ದಳ (DANSAF) ಕಳೆದ ಕೆಲವು ವಾರಗಳಿಂದ ಆರೋಪಿಯ ಚಲನವಲನಗಳ ಮೇಲೆ ತೀವ್ರ ನಿಗಾ ಇರಿಸಿತ್ತು.
ವಾಹನ ತಪಾಸಣೆ ಸಂದರ್ಭದಲ್ಲಿ ಅನುಮಾನಾಸ್ಪದವಾಗಿ ವರ್ತಿಸಿದ ಹೈದರ್‌ನನ್ನು ಪೊಲೀಸರು ತೀವ್ರ ತಪಾಸಣೆಗೆ ಒಳಪಡಿಸಿದಾಗ, ಆತ ಬಚ್ಚಿಟ್ಟುಕೊಂಡಿದ್ದ 3.61 ಗ್ರಾಂ ಎಂಡಿಎಂಎ ಮಾದಕವಸ್ತು ಪತ್ತೆಯಾಗಿದೆ. ಆರೋಪಿಯು ಈ ಮಾದಕವಸ್ತುವನ್ನು ಸ್ವಂತ ಬಳಕೆ ಹಾಗೂ ಮಾರಾಟಕ್ಕಾಗಿ ಸಂಗ್ರಹಿಸಿಟ್ಟಿದ್ದನು ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿಗೆ ಮಾದಕವಸ್ತು ಪೂರೈಕೆಯಾದ ಮೂಲದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.



