ಶ್ರೀನಗರ: ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನವೆಂಬರ್ 11ರಂದು ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) ತನಿಖಾ ಠಾಣೆ ಮೇಲೆ ಉಗ್ರರು ನಡೆಸಿದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಭಯೋತ್ಪಾದಕರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಸೇನೆ ಹಾಗೂ ಭದ್ರತಾ ಪಡೆಗಳು ಭಾನುವಾರ ಜಂಟಿ ಶೋಧ ಕಾರ್ಯಾಚರಣೆ ಆರಂಭಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರ ಜಿಲ್ಲೆಯ ಖುದ್ವಾನಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉಗ್ರರು ಅಡಗಿರುವ ಬಗ್ಗೆ ಜಮ್ಮು-ಕಾಶ್ಮೀರ ಪೊಲೀಸರು ನೀಡಿದ ಮಾಹಿತಿ ಮೇರೆಗೆ ಈ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಸೇನೆಯ ಉನ್ನತ ಅಧಿಕಾರಿಗಳು, ಡಿಜಿಪಿ ನಳಿನ್ ಪ್ರಭಾತ್ ಹಾಗೂ ಕಾಶ್ಮೀರ ವಲಯ ಐಜಿಪಿ ಸುಜಿತ್ ಕುಮಾರ್ ಸಿಂಗ್ ಅವರು ಈ ಕಾರ್ಯಾಚರಣೆಯ ಉಸ್ತುವಾರಿ ವಹಿಸಿದ್ದಾರೆ.
ಕಾರ್ಯಾಚರಣೆ ನಡೆಯುತ್ತಿರುವ ಪ್ರದೇಶಗಳಲ್ಲಿ ಮಾರ್ಗಗಳನ್ನು ಬಂದ್ ಮಾಡಲಾಗಿದ್ದು, ತಪಾಸಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬುಧವಾರ ಸಿಆರ್ಪಿಎಫ್ ಚೆಕ್ಪೋಸ್ಟ್ ಮೇಲೆ ಉಗ್ರರು ಗುಂಡಿನ ನಡೆಸಿದ ದಾಳಿಯಲ್ಲಿ ಮೂವರು ಸಿಆರ್ಪಿಎಫ್ ಯೋಧರು ಗಾಯಗೊಂಡಿದ್ದರು.
ದಾಳಿಕೋರರನ್ನು ಪತ್ತೆಹಚ್ಚಲು ಭದ್ರತಾ ಪಡೆಗಳು ಕಳೆದ ನಾಲ್ಕು ದಿನಗಳಿಂದ ತೀವ್ರ ಶೋಧ ನಡೆಸುತ್ತಿದ್ದಾರೆ.



