ರಾಜ್ಯಗಳು ಪ್ರಸ್ತಾಪಿಸಿದ ಆಡಳಿತಾತ್ಮಕ ಅಡೆತಡೆಗಳು ಹಾಗೂ ವಿಳಂಬದ ಸಮಸ್ಯೆಗಳನ್ನು ಪರಿಹರಿಸಲು ಕೇಂದ್ರ ಗಣಿ ಸಚಿವಾಲಯ ಕ್ರಮ ಕೈಗೊಳ್ಳಲಿದೆ ಎಂದು ಕಾರ್ಯದರ್ಶಿ ಕೇಶವ್ ಚಂದ್ರ ಭರವಸೆ
ಪಣಜಿ: ದೇಶವು ಖನಿಜ ಸಂಪನ್ಮೂಲಗಳಲ್ಲಿ ಸ್ವಾವಲಂಬನೆ ಸಾಧಿಸಲು ಹಾಗೂ ಗಣಿಗಾರಿಕೆ ಆದಾಯವನ್ನು ಹೆಚ್ಚಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಸಹಕಾರವನ್ನು ಮತ್ತಷ್ಟು ಬಲಪಡಿಸಬೇಕು ಎಂದು ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಜಿ. ಕಿಶನ್ ರೆಡ್ಡಿ ಹೇಳಿದ್ದಾರೆ.
ಗೋವಾದಲ್ಲಿ ಮುಕ್ತಾಯಗೊಂಡ ನಾಲ್ಕನೇ ಗಣಿಗಾರಿಕೆ ಸಚಿವರ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನದಲ್ಲಿ ಅವರು ಮಾತನಾಡಿದರು.
ತೆಲಂಗಾಣ, ಪಶ್ಚಿಮ ಬಂಗಾಳ, ಕರ್ನಾಟಕ, ರಾಜಸ್ಥಾನ, ಉತ್ತರ ಪ್ರದೇಶ, ಆಂಧ್ರಪ್ರದೇಶ ಮತ್ತು ಕೇರಳ ಸೇರಿದಂತೆ ವಿವಿಧ ರಾಜ್ಯಗಳ ಪ್ರತಿನಿಧಿಗಳು ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಗಣಿಗಾರಿಕೆ ಕ್ಷೇತ್ರದಲ್ಲಿನ ಹೊಸ ಅವಕಾಶಗಳು ಮತ್ತು ಸವಾಲುಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ನಿರ್ಣಾಯಕ ಖನಿಜಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಖನಿಜ ಅನ್ವೇಷಣಾ ಕಾರ್ಯಗಳಿಗೆ ವೇಗ ನೀಡಬೇಕು. ವೈಜ್ಞಾನಿಕ ಆಧಾರಿತ ಗಣಿಗಾರಿಕೆ ಯೋಜನೆ ಹಾಗೂ ಗಣಿಗಾರಿಕೆ ಚಟುವಟಿಕೆಗಳ ಮುಕ್ತಾಯಕ್ಕೆ ಸಂಬಂಧಿಸಿದ ಕ್ರಮಗಳನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು ಎಂದು ಸಚಿವರು ಸೂಚಿಸಿದರು.
ರಾಜ್ಯಗಳು ಪ್ರಸ್ತಾಪಿಸಿದ ಆಡಳಿತಾತ್ಮಕ ಅಡೆತಡೆಗಳು ಮತ್ತು ವಿಳಂಬದ ಸಮಸ್ಯೆಗಳನ್ನು ಪರಿಹರಿಸಲು ಕೇಂದ್ರ ಗಣಿ ಸಚಿವಾಲಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಸಚಿವಾಲಯದ ಕಾರ್ಯದರ್ಶಿ ಕೇಶವ್ ಚಂದ್ರ ಭರವಸೆ ನೀಡಿದರು.
2047ರ ವೇಳೆಗೆ 'ವಿಕಸಿತ ಭಾರತ'ದ ಗುರಿ ಸಾಧಿಸುವ ನಿಟ್ಟಿನಲ್ಲಿ ಗಣಿಗಾರಿಕೆ ಕ್ಷೇತ್ರವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ರೂಪಿಸಲು ಬದ್ಧವಾಗಿರುವುದಾಗಿ ಸಮ್ಮೇಳನದಲ್ಲಿ ತಿಳಿಸಲಾಯಿತು.



